YouVersion Logo
Search Icon

ಮತ್ತಾಯ 4

4
ಪಿಶಾಚಿಯಿಂದ ಪ್ರಲೋಭನೆ
(ಮಾರ್ಕ. 1:12-13; ಲೂಕ. 4:1-13)
1ಯೇಸುಸ್ವಾಮಿ ಪಿಶಾಚಿಯಿಂದ ಪರಿಶೋಧಿತರಾಗಲೆಂದು ಪವಿತ್ರಾತ್ಮ ಅವರನ್ನು ಬೆಂಗಾಡಿಗೆ ಕರೆದೊಯ್ದರು.
2ಅಲ್ಲಿ ಯೇಸು ನಲವತ್ತು ದಿನ ಹಗಲಿರುಳೂ ಉಪವಾಸವಿದ್ದರು. ಅನಂತರ ಅವರಿಗೆ ಬಹಳ ಹಸಿವಾಯಿತು. 3ಆಗ ಶೋಧಕನು ಬಂದು, “ನೀನು ದೇವರ ಪುತ್ರನೆಂಬುದು ಸತ್ಯವಾದರೆ, ಈ ಕಲ್ಲುಗಳು ರೊಟ್ಟಿಗಳಾಗಲೆಂದು ಆಜ್ಞೆಮಾಡು,” ಎಂದನು. 4ಅದಕ್ಕೆ ಯೇಸುಸ್ವಾಮಿ, “ಪವಿತ್ರಗ್ರಂಥದಲ್ಲಿ ಹೇಳಿರುವ ಪ್ರಕಾರ, ‘ಮಾನವನು ಜೀವಿಸುವುದು ಆಹಾರದಿಂದ ಮಾತ್ರವಲ್ಲ; ದೇವರಾಡುವ ಪ್ರತಿಯೊಂದು ನುಡಿಯಿಂದ’,” ಎಂದರು.
5ಬಳಿಕ ಪಿಶಾಚಿ ಅವರನ್ನು ಪವಿತ್ರ ನಗರಕ್ಕೆ ಅಂದರೆ ಜೆರುಸಲೇಮಿಗೆ ಕರೆದೊಯ್ದು ಮಹಾದೇವಾಲಯದ ಗೋಪುರದ ತುದಿಯ ಮೇಲೆ ನಿಲ್ಲಿಸಿ, 6“ನೀನು ದೇವರ ಪುತ್ರನೆಂಬುದು ಸತ್ಯವಾದರೆ ಕೆಳಕ್ಕೆ ಧುಮುಕು. ಏಕೆಂದರೆ, ಪವಿತ್ರಗ್ರಂಥದಲ್ಲಿ ಬರೆದಿರುವ ಪ್ರಕಾರ, ‘ದೇವರೇ ತಮ್ಮ ದೂತರಿಗೆ ಆಜ್ಞೆಮಾಡುವರು’ ಮತ್ತು ‘ಇವರು ನಿನ್ನ ಕಾಲುಗಳು ಕಲ್ಲುಗಳಿಗೆ ತಾಕದಂತೆ ನಿನ್ನನ್ನು ಕೈಗಳಲ್ಲಿ ಆತುಕೊಳ್ಳುವರು’,” ಎಂದಿತು. 7ಅದಕ್ಕೆ ಯೇಸು, “ ‘ನಿನ್ನ ದೇವರು ಸರ್ವೇಶ್ವರ; ನೀನು ಅವರನ್ನು ಪರೀಕ್ಷಿಸಬಾರದು’, ಎಂದೂ ಸಹ ಪವಿತ್ರಗ್ರಂಥದಲ್ಲಿ ಬರೆದಿದೆ,” ಎಂದರು.
8ಅನಂತರ ಪಿಶಾಚಿ ಯೇಸುವನ್ನು ಬಹಳ ಎತ್ತರವಾದ ಬೆಟ್ಟಕ್ಕೆ ಕೊಂಡೊಯ್ದು, ಪ್ರಪಂಚದ ಎಲ್ಲಾ ರಾಜ್ಯಗಳನ್ನೂ ಅವುಗಳ ವೈಭವವನ್ನೂ ತೋರಿಸಿತು. 9“ನೀನು ನನಗೆ ಅಡ್ಡಬಿದ್ದು ಆರಾಧಿಸುವೆಯಾದರೆ ಇವೆಲ್ಲವನ್ನು ನಿನಗೆ ಕೊಡಬಲ್ಲೆ,” ಎಂದಿತು. 10ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ಸೈತಾನನೇ, ತೊಲಗು. ‘ನಿನ್ನ ದೇವರಾದ ಸರ್ವೇಶ್ವರನನ್ನು ಆರಾಧಿಸು. ಅವರೊಬ್ಬರಿಗೇ ಸೇವೆಸಲ್ಲಿಸು,’ ಎಂದೂ ಪವಿತ್ರಗ್ರಂಥದಲ್ಲಿ ಬರೆದಿದೆ,” ಎಂದರು. 11ಆಗ ಪಿಶಾಚಿ ಯೇಸುವನ್ನು ಬಿಟ್ಟು ತೊಲಗಿತು. ದೇವದೂತರು ಬಂದು ಅವರನ್ನು ಉಪಚರಿಸಿದರು.
ಗಲಿಲೇಯದಲ್ಲಿ ಸೇವಾಜೀವನ
(ಮಾರ್ಕ. 1:14-15; ಲೂಕ. 4:14-15)
12ಯೊವಾನ್ನನು ಬಂಧಿತನಾದನೆಂದು ಯೇಸುಸ್ವಾಮಿ ಕೇಳಿ, ಆ ಪ್ರಾಂತ್ಯವನ್ನು ಬಿಟ್ಟು ಗಲಿಲೇಯಕ್ಕೆ ಹೊರಟುಹೋದರು. 13ನಜರೇತ್ ಊರಿನಲ್ಲಿ ತಂಗದೆ ಗಲಿಲೇಯ ಸರೋವರದ ಸಮೀಪದಲ್ಲಿರುವ ಕಫೆರ್ನವುಮ್ ಎಂಬ ಊರಿನಲ್ಲಿ ವಾಸಮಾಡಿದರು. 14ಇದು ಜೆಬುಲೋನ್ ಹಾಗೂ ನೆಫ್ತಲೀಮ್ ನಾಡುಗಳ ಸರಹದ್ದಿನಲ್ಲಿದೆ. 15ಹೀಗೆ:
“ಜೆಬುಲೋನ್ ನಾಡೇ, ನೆಫ್ತಲೀಮ್ ನಾಡೇ,
ಸರೋವರದ ಹತ್ತಿರವಿರುವ ಹಾದಿಬೀದಿಯೇ,
ಜೋರ್ಡನಿನ ಹೊರವಲಯವೇ,
16ಕಾರ್ಗತ್ತಲಲಿ ವಾಸಿಸುವವರಿಗೆ
ದಿವ್ಯಜ್ಯೋತಿಯೊಂದು ಕಾಣಿಸಿತು.
ಮರಣಛಾಯೆ ಕವಿದ ನಾಡಿಗರಿಗೆ
ಅರುಣೋದಯವಾಯಿತು,”
ಎಂದು ನುಡಿದ ಪ್ರವಾದಿ ಯೆಶಾಯನ ವಚನಗಳು ಈಡೇರಿದವು.
17ಅಂದಿನಿಂದ ಯೇಸು, “ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿರಿ, ದೇವರಿಗೆ ಅಭಿಮುಖರಾಗಿರಿ, ಸ್ವರ್ಗಸಾಮ್ರಾಜ್ಯ ಸಮೀಪಿಸಿತು,” ಎಂಬ ಸಂದೇಶವನ್ನು ಬೋಧಿಸತೊಡಗಿದರು.
ಪ್ರಥಮ ಶಿಷ್ಯರ ಆಯ್ಕೆ
(ಮಾರ್ಕ. 1:16-20; ಲೂಕ. 5:1-11)
18ಯೇಸುಸ್ವಾಮಿ ಗಲಿಲೇಯ ಸರೋವರದ ತೀರದಲ್ಲಿ ನಡೆದುಹೋಗುತ್ತಿದ್ದರು. ಆಗ ಇಬ್ಬರು ಸಹೋದರರನ್ನು ಕಂಡರು. ಇವರೇ ‘ಪೇತ್ರ’ ಎನಿಸಿಕೊಂಡ ಸಿಮೋನ ಮತ್ತು ಅವನ ಸಹೋದರ ಅಂದ್ರೆಯ. ಬೆಸ್ತರಾದ ಇವರು ಸರೋವರದಲ್ಲಿ ಬಲೆ ಬೀಸುತ್ತಾ ಇದ್ದರು. 19“ನನ್ನನ್ನು ಹಿಂಬಾಲಿಸಿ ಬನ್ನಿ. ನಿಮ್ಮನ್ನು ಮನುಷ್ಯರನ್ನೇ ಹಿಡಿಯುವವರನ್ನಾಗಿ ಮಾಡುವೆನು,” ಎಂದು ಹೇಳಿ ಯೇಸು ಅವರನ್ನು ಕರೆದರು. 20ತಕ್ಷಣವೇ, ಅವರು ತಮ್ಮ ಬಲೆಗಳನ್ನು ಬಿಟ್ಟು ಯೇಸುವನ್ನು ಹಿಂಬಾಲಿಸಿದರು.
21ಅಲ್ಲಿಂದ ಮುಂದಕ್ಕೆ ಹೋಗುತ್ತಿದ್ದಾಗ ಯೇಸು ಜೆಬೆದಾಯನ ಮಕ್ಕಳಾದ ಯಕೋಬ ಮತ್ತು ಯೊವಾನ್ನ ಎಂಬ ಇನ್ನಿಬ್ಬರು ಸಹೋದರರನ್ನು ಕಂಡರು. ಇವರು ತಮ್ಮ ತಂದೆ ಜೆಬೆದಾಯನೊಡನೆ ದೋಣಿಯಲ್ಲಿ ಬಲೆಗಳನ್ನು ಸರಿಪಡಿಸುತ್ತಿದ್ದರು. ಯೇಸು ಇವರನ್ನೂ ಕರೆದರು. 22ಕೂಡಲೇ ಅವರು ದೋಣಿಯನ್ನೂ ತಮ್ಮ ತಂದೆಯನ್ನೂ ಬಿಟ್ಟು ಯೇಸುವನ್ನು ಹಿಂಬಾಲಿಸಿದರು.
ಬೋಧನೆ ಮತ್ತು ಸಾಧನೆ
(ಲೂಕ. 6:17-19)
23ಯೇಸುಸ್ವಾಮಿ ಗಲಿಲೇಯ ಪ್ರಾಂತ್ಯದಲ್ಲೆಲ್ಲಾ ಸಂಚರಿಸಿ ಅಲ್ಲಿನ ಪ್ರಾರ್ಥನಾ ಮಂದಿರಗಳಲ್ಲಿ ಉಪದೇಶಮಾಡುತ್ತಿದ್ದರು. ದೈವರಾಜ್ಯದ ಸಂದೇಶವನ್ನು ಪ್ರಬೋಧಿಸುತ್ತಿದ್ದರು. ಜನರ ಎಲ್ಲಾ ತರಹದ ರೋಗರುಜಿನಗಳನ್ನೂ ಬೇನೆ ಬವಣೆಗಳನ್ನೂ ಗುಣಪಡಿಸುತ್ತಿದ್ದರು. 24ಅವರ ಕೀರ್ತಿ ಸಿರಿಯಾ ದೇಶದಲ್ಲೆಲ್ಲಾ ಹಬ್ಬಿತು. ದೆವ್ವಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯು ಪೀಡಿತರನ್ನೂ ನಾನಾ ತರಹದ ವ್ಯಾಧಿ ಹಾಗೂ ವೇದನೆಯಿಂದ ನರಳುತ್ತಿದ್ದ ಎಲ್ಲ ರೋಗಿಗಳನ್ನೂ ಅವರ ಬಳಿಗೆ ಕರೆತಂದರು. ಯೇಸು ಅವರೆಲ್ಲರನ್ನು ಸ್ವಸ್ಥಪಡಿಸಿದರು. 25ಗಲಿಲೇಯ, ದೆಕಪೊಲಿ, ಜೆರುಸಲೇಮ್, ಜುದೇಯ ಎಂಬ ಸ್ಥಳಗಳಿಂದಲೂ ಜೋರ್ಡನ್ ನದಿಯ ಆಚೆಕಡೆಯಿಂದಲೂ ಜನರು ತಂಡೋಪತಂಡವಾಗಿ ಬಂದು ಯೇಸುವನ್ನು ಹಿಂಬಾಲಿಸಿದರು.

Highlight

Share

Copy

None

Want to have your highlights saved across all your devices? Sign up or sign in

YouVersion uses cookies to personalize your experience. By using our website, you accept our use of cookies as described in our Privacy Policy