YouVersion Logo
Search Icon

ಮತ್ತಾಯ 6

6
ದಾನಧರ್ಮದ ನವ್ಯವಿಧಾನ
1“ಜನರಿಗೆ ತೋರಿಸಿಕೊಳ್ಳುವುದಕ್ಕಾಗಿ ನಿಮ್ಮ ಧಾರ್ಮಿಕ ಕಾರ್ಯಗಳನ್ನು ಅವರ ಎದುರಿಗೆ ಪ್ರದರ್ಶಿಸದಂತೆ ಎಚ್ಚರಿಕೆಯಿಂದಿರಿ. ಹಾಗೆ ಮಾಡಿದರೆ, ಸ್ವರ್ಗದಲ್ಲಿರುವ ನಿಮ್ಮ ತಂದೆಯಿಂದ ನಿಮಗೆ ಪ್ರತಿಫಲ ದೊರಕದು. 2ಅಂತೆಯೇ, ನೀನು ದಾನಧರ್ಮ ಮಾಡುವಾಗ ತುತೂರಿಯನ್ನು ಊದಿಸಬೇಡ. ಜನರ ಹೊಗಳಿಕೆಗಾಗಿ ಕಪಟಿಗಳು ಪ್ರಾರ್ಥನಾಮಂದಿರಗಳಲ್ಲೂ ಹಾದಿಬೀದಿಗಳಲ್ಲೂ ಹೀಗೆ ಪ್ರದರ್ಶನ ಮಾಡುತ್ತಾರೆ. ಅವರಿಗೆ ಬರಬೇಕಾದ ಫಲ ಪೂರ್ತಿಯಾಗಿ ದೊರಕಿದ್ದಾಯಿತೆಂದು ನಿಮಗೆ ಖಚಿತವಾಗಿ ಹೇಳುತ್ತೇನೆ. 3ಆದರೆ ನೀನು ದಾನಧರ್ಮಮಾಡುವಾಗ ನಿನ್ನ ಬಲಗೈ ಕೊಡುವುದು ನಿನ್ನ ಎಡಗೈಗೂ ತಿಳಿಯದ ಹಾಗೆ ಗೋಪ್ಯವಾಗಿರಲಿ. 4ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆ ನಿನಗೆ ಪ್ರತಿಫಲವನ್ನು ಕೊಡುವರು.
ಜಪತಪದ ಹೊಸ ವಿಧಾನ
(ಲೂಕ. 11:2-4)
5“ಪ್ರಾರ್ಥನೆ ಮಾಡುವಾಗ ಕಪಟಿಗಳಂತೆ ಮಾಡಬೇಡಿ. ಜನರು ತಮ್ಮನ್ನು ನೋಡಲೆಂದು ಪ್ರಾರ್ಥನಾ ಮಂದಿರಗಳಲ್ಲೂ ಬೀದಿಯ ಚೌಕಗಳಲ್ಲೂ ನಿಂತು ಪ್ರಾರ್ಥನೆ ಮಾಡಲು ಇಚ್ಛಿಸುತ್ತಾರೆ. ಅವರಿಗೆ ಬರಬೇಕಾದ ಪೂರ್ತಿ ಫಲ ಆಗಲೇ ಬಂದಾಯಿತೆಂಬುದು ನಿಮಗೆ ಚೆನ್ನಾಗಿ ತಿಳಿದಿರಲಿ. 6ನೀನು ಪ್ರಾರ್ಥನೆ ಮಾಡುವಾಗ ನಿನ್ನ ಕೊಠಡಿಗೆ ಹೋಗು; ಬಾಗಿಲನ್ನು ಮುಚ್ಚು; ಅಂತರಂಗದಲ್ಲಿರುವ ನಿನ್ನ ತಂದೆಗೆ ಪ್ರಾರ್ಥನೆಮಾಡು. ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆ ನಿನಗೆ ಪ್ರತಿಫಲವನ್ನು ಕೊಡುವರು.”
7“ಪ್ರಾರ್ಥನೆ ಮಾಡುವಾಗ ಪರಕೀಯರಂತೆ ನಿರರ್ಥಕ ಪದಗಳನ್ನು ಪಿಸುಗುಟ್ಟಬೇಡ. ತಮ್ಮ ಪ್ರಾರ್ಥನೆ ದೀರ್ಘವಾದಷ್ಟೂ ದೇವರು ಆಲಿಸುತ್ತಾರೆಂದು ಅವರು ಭಾವಿಸುತ್ತಾರೆ. 8ನೀವು ಅವರಂತೆ ಆಗಬೇಡಿ. ನಿಮ್ಮ ಅಗತ್ಯಗಳೇನೆಂದು ನೀವು ಕೇಳುವುದಕ್ಕೆ ಮೊದಲೇ ನಿಮ್ಮ ತಂದೆಗೆ ಗೊತ್ತಿದೆ. 9ಆದುದರಿಂದ ಹೀಗೆಂದು ಪ್ರಾರ್ಥನೆಮಾಡಿ:
10‘ಸ್ವರ್ಗ#6:10 ಅಥವಾ : ಪರಲೋಕ. ದಲ್ಲಿರುವ ಓ ನಮ್ಮ ತಂದೆಯೇ,
ನಿಮ್ಮ ಪವಿತ್ರ ನಾಮ ಪೂಜಿತವಾಗಲಿ;
ನಿಮ್ಮ ಸಾಮ್ರಾಜ್ಯ ಬರಲಿ;
ನಿಮ್ಮ ಚಿತ್ತ ಸ್ವರ್ಗದಲ್ಲಿ ನೆರವೇರುವ ಪ್ರಕಾರ ಜಗತ್ತಿನಲ್ಲಿಯೂ ನೆರವೇರಲಿ.
11ನಮ್ಮ ಅನುದಿನದ ಆಹಾರವನ್ನು ನಮಗಿಂದು ಕೊಡಿ.
12ನಮಗೆ ತಪ್ಪುಮಾಡಿದವರನ್ನು#6:12 ಮೂಲ : ಸಾಲಗಾರರನ್ನು ನಾವು ಕ್ಷಮಿಸುವ ಪ್ರಕಾರ
ನಾವು ಮಾಡಿದ ತಪ್ಪುಗಳನ್ನು ಕ್ಷಮಿಸಿ.
13ನಮ್ಮನ್ನು ಶೋಧನೆಗೆ ಒಳಪಡಿಸಬೇಡಿ; ಕೇಡಿನಿಂದ ನಮ್ಮನ್ನು ರಕ್ಷಿಸಿರಿ.’#6:13 ಕೆಲವು ಪ್ರತಿಗಳಲ್ಲಿ, “ರಾಜ್ಯವು, ಶಕ್ತಿಯು ಹಾಗು ಮಹಿಮೆಯು ಯುಗಯುಗಾಂತರಕ್ಕೂ ನಿಮ್ಮದೇ, ಆಮೆನ್.” ಎಂಬ ವಾಕ್ಯವೂ ಇದೆ.
14“ಜನರ ತಪ್ಪುಗಳನ್ನು ನೀವು ಕ್ಷಮಿಸಿದರೆ ಸ್ವರ್ಗದಲ್ಲಿರುವ ನಿಮ್ಮ ತಂದೆ ನಿಮ್ಮನ್ನು ಕ್ಷಮಿಸುವರು. 15ಜನರನ್ನು ನೀವು ಕ್ಷಮಿಸದಿದ್ದರೆ, ನಿಮ್ಮ ತಂದೆಯೂ ನಿಮ್ಮ ತಪ್ಪುಗಳನ್ನು ಕ್ಷಮಿಸರು.”
16“ಉಪವಾಸ ಮಾಡುವಾಗ ಕಪಟಿಗಳಂತೆ ಮುಖ ಸಪ್ಪೆಮಾಡಬೇಡಿ. ಜನರ ಕಣ್ಣಿಗೆ ತಾವು ಉಪವಾಸಿಗಳೆಂದು ತೋರ್ಪಡಿಸಿಕೊಳ್ಳುವುದಕ್ಕಾಗಿ ಅವರು ಮುಖವನ್ನು ಬಾಡಿಸಿಕೊಳ್ಳುತ್ತಾರೆ. ಅವರಿಗೆ ಬರಬೇಕಾದ ಫಲ ಪೂರ್ತಿಯಾಗಿ ದೊರಕಿಯಾಯಿತೆಂದು ನಿಮಗೆ ಖಚಿತವಾಗಿ ಹೇಳುತ್ತೇನೆ. 17ಆದರೆ ನೀನು ಉಪವಾಸ ಕೈಗೊಂಡಾಗ ಮುಖ ತೊಳೆದುಕೊ, ತಲೆಬಾಚಿಕೊ. 18ಆಗ ಉಪವಾಸ ಮಾಡುವವನಂತೆ ನೀನು ಜನರಿಗೆ ಕಾಣಿಸಿಕೊಳ್ಳುವುದಿಲ್ಲ; ಅಂತರಂಗದಲ್ಲಿ ಇರುವ ನಿನ್ನ ತಂದೆಗೆ ಮಾತ್ರ ಕಾಣಿಸಿಕೊಳ್ಳುವೆ. ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆ ಅದಕ್ಕೆಲ್ಲ ಪ್ರತಿಫಲ ಕೊಡುವರು.”
ಅಳಿಯದ ಆಸ್ತಿ
(ಲೂಕ. 12:33-34)
19“ಇಹಲೋಕದಲ್ಲಿ ಆಸ್ತಿಪಾಸ್ತಿಯನ್ನು ಶೇಖರಿಸಿಡಬೇಡಿ. ಇಲ್ಲಿ ತುಕ್ಕು ಹಿಡಿದೀತು; ನುಸಿ ಹೊಡೆದೀತು; ಕಳ್ಳರು ಕನ್ನ ಕೊರೆದು ಕದ್ದಾರು. 20ನಿಮ್ಮ ಆಸ್ತಿಯನ್ನು ಸ್ವರ್ಗದಲ್ಲಿ ಕೂಡಿಸಿಡಿ. ಅಲ್ಲಿ ತುಕ್ಕು ಹಿಡಿಯದು. ನುಸಿ ಹೊಡೆಯದು, ಕಳ್ಳರು ಕನ್ನ ಕೊರೆದು ಕದಿಯರು. 21ನಿನ್ನ ನಿಧಿ ಎಲ್ಲಿದೆಯೋ ಅಲ್ಲೇ ಇರುವುದು ನಿನ್ನ ಹೃದಯ.”
ಮಂಕಾಗದ ಮನಸ್ಸಾಕ್ಷಿ
(ಲೂಕ. 11:34-36)
22“ಕಣ್ಣೇ ದೇಹಕ್ಕೆ ದೀಪ. ನಿನ್ನ ಕಣ್ಣು ಸರಿಯಿದ್ದರೆ ದೇಹವೆಲ್ಲ ಕಾಂತಿಮಯವಾಗುವುದು. ಅದು ಕೆಟ್ಟಿದ್ದರೆ ನಿನ್ನ ದೇಹವೆಲ್ಲ ಕತ್ತಲೆಮಯವಾಗುವುದು. 23ನಿನ್ನೊಳಗಿರುವ ಬೆಳಕೇ ಕತ್ತಲೆಯಾದಲ್ಲಿ ಅದೆಂತಹ ಕರಾಳ ಕತ್ತಲೆಯಾಗಿರಬಹುದು!”
ದೇವರಿಗೂ ಧನಪಿಶಾಚಿಗೂ ಸೇವೆಮಾಡಲಾಗದು
(ಲೂಕ. 16:13; 12:22-31)
24“ಯಾರೂ ಇಬ್ಬರು ಯಜಮಾನರಿಗೆ ಜೀತಮಾಡಲಾಗದು. ಅವನು ಒಬ್ಬನನ್ನು ದ್ವೇಷಿಸಿ, ಇನ್ನೊಬ್ಬನನ್ನು ಪ್ರೀತಿಸುತ್ತಾನೆ; ಅಥವಾ, ಒಬ್ಬನೊಡನೆ ಹೊಂದಿಕೊಂಡು ಇನ್ನೊಬ್ಬನನ್ನು ತಾತ್ಸಾರ ಮಾಡುತ್ತಾನೆ. ದೇವರಿಗೂ ದ್ರವ್ಯಕ್ಕೂ#6:24 ಮೂಲ : ಮಾಮೋನನಿಗೂ. ಒಟ್ಟಿಗೆ ಸೇವೆಮಾಡಲು ನಿಮ್ಮಿಂದಾಗದು.”
ಗೇಣು ಹೊಟ್ಟೆಗಾಗಿ ಮಾರು ಬಟ್ಟೆಗಾಗಿ ಚಿಂತೆ ಏಕೆ?
25“ನಾನು ಹೇಳುವುದನ್ನು ಕೇಳಿ: ‘ಪ್ರಾಣಧಾರಣೆಗೆ ಏನು ಉಣ್ಣುವುದು, ಏನು ಕುಡಿಯುವುದು; ದೇಹರಕ್ಷಣೆಗೆ ಏನು ಹೊದೆಯುವುದು’ ಎಂದು ಚಿಂತೆಮಾಡಬೇಡಿ. ಊಟಕ್ಕಿಂತ ಪ್ರಾಣ ಉಡುಪಿಗಿಂತ ದೇಹ ಮೇಲಾದುದಲ್ಲವೆ? 26ಆಕಾಶದಲ್ಲಿ ಹಾರಾಡುವ ಹಕ್ಕಿಗಳನ್ನು ಗಮನಿಸಿ: ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ, ಕಣಜಗಳಲ್ಲಿ ಕೂಡಿಡುವುದೂ ಇಲ್ಲ. ಆದರೂ ಸ್ವರ್ಗದಲ್ಲಿರುವ ನಿಮ್ಮ ತಂದೆ ಅವುಗಳನ್ನು ಪೋಷಿಸುತ್ತಾರೆ. ಹಕ್ಕಿಗಳಿಗಿಂತ ನೀವು ಎಷ್ಟೋ ಮೇಲಾದವರಲ್ಲವೆ? 27ಚಿಂತಿಸಿ, ಚಿಂತಿಸಿ ನಿಮ್ಮ ಜೀವನಾವಧಿಯನ್ನು ಕೊಂಚಕಾಲವಾದರೂ ದೀರ್ಘಮಾಡಲು ನಿಮ್ಮಲ್ಲಿ ಯಾರಿಂದಾದೀತು? 28ಉಡುಗೆತೊಡುಗೆಗಳ ಚಿಂತೆ ನಿಮಗೇಕೆ? ವನಕುಸುಮಗಳು ಬೆಳೆಯುವ ರೀತಿಯನ್ನು ಗಮನಿಸಿ ನೋಡಿ; ಅವು ದುಡಿಯುವುದಿಲ್ಲ, ನೂಲುವುದಿಲ್ಲ. 29ಆದರೂ ಅರಸ ಸೊಲೊಮೋನನು ತನ್ನ ಸರ್ವವೈಭವದಲ್ಲಿ ಇದ್ದಾಗಲೂ ಈ ಕುಸುಮಗಳಲ್ಲಿ ಒಂದರಷ್ಟೂ ಸುಂದರವಾದ ಉಡುಪನ್ನು ಧರಿಸಿರಲಿಲ್ಲ. 30ಅಲ್ಪವಿಶ್ವಾಸಿಗಳೇ, ಇಂದಿದ್ದು ನಾಳೆ ಒಲೆಪಾಲಾಗುವ ಬಯಲಿನ ಹುಲ್ಲಿಗೆ ದೇವರು ಹೀಗೆ ಉಡಿಸಿದರೆ, ನಿಮಗೆ ಮತ್ತಷ್ಟೂ ಮಾಡಲಾರರೇ? 31ಆದುದರಿಂದ ತಿನ್ನಲು ಏನು? ಕುಡಿಯಲು ಏನು? ಉಡಲು ಏನು? ಎಂದು ಪೇಚಾಡಬೇಡಿ. 32ಇವೆಲ್ಲವುಗಳಿಗಾಗಿ ಪರಕೀಯರೂ ಪರದಾಡುತ್ತಾರೆ; ಇವೆಲ್ಲಾ ನಿಮಗೆ ಅವಶ್ಯ ಎಂದು ಸ್ವರ್ಗದಲ್ಲಿರುವ ನಿಮ್ಮ ತಂದೆಗೆ ತಿಳಿದಿದೆ. 33ನೀವಾದರೋ ಮೊದಲು ದೇವರ ಸಾಮ್ರಾಜ್ಯಕ್ಕಾಗಿ, ಅವರ ಸತ್ಸಂಬಂಧಕ್ಕಾಗಿ ತವಕಪಡಿ. ಇದರೊಂದಿಗೆ ಅವೆಲ್ಲವೂ ನಿಮಗೆ ನೀಡಲಾಗುವುದು. 34ಆದುದರಿಂದ ನಾಳೆಯ ಚಿಂತೆ ನಿಮಗೆ ಬೇಡ. ನಾಳೆಯ ಚಿಂತೆ ನಾಳೆಗೇ ಇರಲಿ. ಇಂದಿನ ಪಾಡೇ ಇಂದಿಗೆ ಸಾಕು.”

Highlight

Share

Copy

None

Want to have your highlights saved across all your devices? Sign up or sign in

YouVersion uses cookies to personalize your experience. By using our website, you accept our use of cookies as described in our Privacy Policy