YouVersion Logo
Search Icon

ಮಾರ್ಕ 1

1
ಸ್ನಾನಿಕ ಯೊವಾನ್ನನ ಪ್ರಕರಣ
(ಮತ್ತಾ. 3:1-12; ಲೂಕ. 3:1-18; ಯೊವಾ. 1:19-28)
1ದೇವರ ಪುತ್ರರಾದ ಯೇಸುಕ್ರಿಸ್ತರ ಶುಭಸಂದೇಶ. ಇದು ಪ್ರವಾದಿ ಯೆಶಾಯನು ಮೊದಲೇ ಬರೆದಿಟ್ಟ ಪ್ರಕಾರ ಪ್ರಾರಂಭವಾಯಿತು:
2“ ‘ಇಗೋ, ನನ್ನ ದೂತನನ್ನು ನಿನಗೆ ಮುಂದಾಗಿ, ಕಳಿಸುವೆನು
ಆತನು ನಿನ್ನ ಮಾರ್ಗವನ್ನು ಮುಂಚಿತವಾಗಿ ಸಿದ್ಧಗೊಳಿಸುವನು,’
ಎಂದು ದೇವರೇ ನುಡಿದಿದ್ದಾರೆ.”
3“ ‘ಸರ್ವೇಶ್ವರನಿಗಾಗಿ ಮಾರ್ಗವನ್ನು
ಸಿದ್ಧಪಡಿಸಿರಿ; ಆತನ ಆಗಮನಕ್ಕಾಗಿ
ಹಾದಿಯನ್ನು ಸರಾಗಮಾಡಿರಿ,’
ಎಂದೊಬ್ಬನು ಘೋಷಿಸುತ್ತಿದ್ದಾನೆ,
ಬೆಂಗಾಡಿನಲ್ಲಿ.”
4ಈ ಪ್ರವಾದನೆಗೆ ಅನುಗುಣವಾಗಿ ಯೊವಾನ್ನನು, “ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿ ದೇವರಿಗೆ ಅಭಿಮುಖರಾಗಿರಿ; ಸ್ನಾನದೀಕ್ಷೆಯನ್ನು ಪಡೆದುಕೊಳ್ಳಿ. ದೇವರು ನಿಮ್ಮ ಪಾಪಗಳನ್ನು ಕ್ಷಮಿಸಿಬಿಡುವರು,” ಎಂದು ಬೆಂಗಾಡಿನಲ್ಲಿ ಜನರಿಗೆ ಸಾರಿ ಹೇಳುತ್ತಾ ಸ್ನಾನದೀಕ್ಷೆ ಕೊಡುತ್ತಾ ಇದ್ದನು. 5ಜುದೇಯ ಪ್ರಾಂತ್ಯದ ಎಲ್ಲೆಡೆಗಳಿಂದಲೂ ಜೆರುಸಲೇಮಿನಿಂದಲೂ ಜನರು ಆತನ ಬಳಿಗೆ ಹೋಗುತ್ತಿದ್ದರು. ಅವರು ತಮ್ಮ ಪಾಪಗಳನ್ನು ಒಪ್ಪಿಕೊಳ್ಳುತ್ತಾ ಜೋರ್ಡನ್ ನದಿಯಲ್ಲಿ ಆತನಿಂದ ಸ್ನಾನದೀಕ್ಷೆ ಪಡೆದುಕೊಳ್ಳುತ್ತಿದ್ದರು. 6ಯೊವಾನ್ನನು ಒಂಟೆಯ ತುಪ್ಪಟದ ಹೊದಿಕೆಯನ್ನು ಹೊದ್ದು, ಸೊಂಟಕ್ಕೆ ತೊಗಲಿನ ನಡುಪಟ್ಟಿಯನ್ನು ಕಟ್ಟಿಕೊಳ್ಳುತ್ತಿದ್ದನು. ಮಿಡತೆಗಳೂ ಕಾಡುಜೇನೂ ಆತನ ಆಹಾರವಾಗಿತ್ತು. 7ಆತನು, “ನನ್ನಾನಂತರ ನನಗಿಂತಲೂ ಶಕ್ತರೊಬ್ಬರು ಬರುತ್ತಾರೆ; ಬಗ್ಗಿ ಅವರ ಪಾದರಕ್ಷೆಗಳನ್ನು ಬಿಚ್ಚುವುದಕ್ಕೂ ನಾನು ಅರ್ಹನಲ್ಲ. 8ನಾನು ನಿಮಗೆ ನೀರಿನಿಂದ ಸ್ನಾನದೀಕ್ಷೆ ಕೊಟ್ಟೆನು; ಅವರಾದರೋ ನಿಮಗೆ ಪವಿತ್ರಾತ್ಮ ಅವರಿಂದ ದೀಕ್ಷಾಸ್ನಾನ ಕೊಡುವರು,” ಎಂದು ಘೋಷಿಸುತ್ತಿದ್ದನು.
ಯೇಸು ಪಡೆದ ದೀಕ್ಷಾಸ್ನಾನ#1:8 ಕ್ಲಿಷ್ಟಪದಗಳ ಅರ್ಥ ನೋಡಿ.
(ಮತ್ತಾ. 3:13—4:11; ಲೂಕ. 3:21-22; 4:1-13)
9ಹೀಗಿರುವಲ್ಲಿ, ಒಂದು ದಿನ ಯೇಸುಸ್ವಾಮಿ ಗಲಿಲೇಯ ಪ್ರಾಂತ್ಯದ ನಜರೇತ್ ಎಂಬ ಊರಿನಿಂದ ಬಂದು, ಜೋರ್ಡನ್ ನದಿಯಲ್ಲಿ ಯೊವಾನ್ನನಿಂದ ದೀಕ್ಷಾಸ್ನಾನ ಪಡೆದುಕೊಂಡರು. 10ನೀರಿನಿಂದ ಅವರು ಮೇಲಕ್ಕೆ ಬರುತ್ತಿರುವಾಗಲೇ ಆಕಾಶವು ತೆರೆದು, ಪವಿತ್ರಾತ್ಮ ಪಾರಿವಾಳದ ರೂಪದಲ್ಲಿ ತಮ್ಮ ಮೇಲೆ ಇಳಿಯುತ್ತಿರುವುದನ್ನು ಕಂಡರು. 11ಇದಲ್ಲದೆ, “ನೀನೇ ನನ್ನ ಪುತ್ರ, ನನಗೆ ಪರಮಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು,” ಎನ್ನುವ ದೈವವಾಣಿ ಕೇಳಿಸಿತು.
ಸೈತಾನನ ಸೋಲು
(ಮತ್ತಾ. 4:1-11; ಲೂಕ. 4:1-13)
12ಅನಂತರ ಯೇಸುಸ್ವಾಮಿಯನ್ನು ಪವಿತ್ರಾತ್ಮ ಬೆಂಗಾಡಿಗೆ ಕರೆದೊಯ್ದರು. 13ವನ್ಯಮೃಗಗಳಿದ್ದ ಆ ಕಾಡಿನಲ್ಲಿ ಯೇಸು ನಾಲ್ವತ್ತು ದಿನಗಳನ್ನು ಕಳೆದರು. ಆ ಅವಧಿಯಲ್ಲಿ ಸೈತಾನನು ಅವರನ್ನು ಪರಿಶೋಧಿಸಲು ಪ್ರಯತ್ನಿಸಿದನು. ದೇವದೂತರು ಅವರನ್ನು ಉಪಚರಿಸಿದರು.
ಗಲಿಲೇಯದಲ್ಲಿ ಪ್ರಬೋಧನೆ
(ಮತ್ತಾ. 4:12-17; ಲೂಕ. 4:14-15)
14ಯೊವಾನ್ನನು ಬಂಧಿತನಾದ ಬಳಿಕ ಯೇಸುಸ್ವಾಮಿ ಗಲಿಲೇಯಕ್ಕೆ ಹೋಗಿ ದೇವರ ಶುಭಸಂದೇಶವನ್ನು ಸಾರಿದರು: 15“ಕಾಲವು ಪರಿಪಕ್ವವಾಗಿದೆ, ದೇವರ ಸಾಮ್ರಾಜ್ಯವು ಸಮೀಪಿಸಿದೆ; ಪಶ್ಚಾತ್ತಾಪಪಟ್ಟು ಪಾಪಜೀವನಕ್ಕೆ ವಿಮುಖರಾಗಿ ದೇವರಿಗೆ ಅಭಿಮುಖರಾಗಿರಿ. ಶುಭಸಂದೇಶದಲ್ಲಿ ವಿಶ್ವಾಸವಿಡಿ,” ಎಂದು ಘೋಷಿಸಿದರು.
ಪ್ರಥಮ ಶಿಷ್ಯರ ಆಯ್ಕೆ
(ಮತ್ತಾ. 4:18-22; ಲೂಕ. 5:1-11)
16ಯೇಸುಸ್ವಾಮಿ ಗಲಿಲೇಯ ಸರೋವರದ ತೀರದಲ್ಲಿ ನಡೆದುಹೋಗುತ್ತಿದ್ದಾಗ ಸಿಮೋನನನ್ನೂ ಆತನ ಸಹೋದರ ಅಂದ್ರೆಯನನ್ನೂ ಕಂಡರು. ಬೆಸ್ತರಾದ ಇವರು ಸರೋವರದಲ್ಲಿ ಬಲೆಬೀಸುತ್ತಾ ಇದ್ದರು. 17ಯೇಸು ಅವರಿಗೆ, “ನನ್ನನ್ನು ಹಿಂಬಾಲಿಸಿ ಬನ್ನಿ, ನಿಮ್ಮನ್ನು ಮನುಷ್ಯರನ್ನೇ ಹಿಡಿಯುವವರನ್ನಾಗಿ ಮಾಡುವೆನು,” ಎಂದು ಕರೆದರು. 18ತಕ್ಷಣವೇ ಅವರು ತಮ್ಮ ಬಲೆಗಳನ್ನು ಬಿಟ್ಟು ಯೇಸುವನ್ನು ಹಿಂಬಾಲಿಸಿದರು.
19ಇನ್ನೂ ಸ್ವಲ್ಪ ಮುಂದಕ್ಕೆ ಹೋಗುತ್ತಿದ್ದಾಗ, ಜೆಬೆದಾಯನ ಮಕ್ಕಳಾದ ಯಕೋಬ ಮತ್ತು ಯೊವಾನ್ನರನ್ನು ಯೇಸು ಕಂಡರು. 20ಅವರು ದೋಣಿಯಲ್ಲಿ ಕುಳಿತು ತಮ್ಮ ಬಲೆಗಳನ್ನು ಸರಿಪಡಿಸುತ್ತಿದ್ದರು. ಕೂಡಲೇ, ಯೇಸು ಅವರನ್ನು ಕರೆದರು. ಅವರೂ ತಮ್ಮ ತಂದೆ ಜೆಬೆದಾಯನನ್ನು ಕೂಲಿಯಾಳುಗಳ ಸಂಗಡ ದೋಣಿಯಲ್ಲೇ ಬಿಟ್ಟು ಯೇಸುವನ್ನು ಹಿಂಬಾಲಿಸಿದರು.
ದೆವ್ವಗಳ ಉಚ್ಚಾಟನೆ
(ಲೂಕ. 4:31-37)
21ಬಳಿಕ ಅವರೆಲ್ಲರೂ ಕಫೆರ್ನವುಮ್ ಎಂಬ ಊರನ್ನು ಸೇರಿದರು. ಸಬ್ಬತ್‍ದಿನ ಬಂದ ಕೂಡಲೇ ಯೇಸುಸ್ವಾಮಿ ಪ್ರಾರ್ಥನಾಮಂದಿರಕ್ಕೆ ಹೋಗಿ ಬೋಧಿಸತೊಡಗಿದರು. ಅವರ ಉಪದೇಶವನ್ನು ಕೇಳಿ ಜನರು ಬೆರಗಾದರು. 22ಏಕೆಂದರೆ ಯೇಸು, ಧರ್ಮಶಾಸ್ತ್ರಿಗಳಂತೆ ಬೋಧಿಸದೆ ಅಧಿಕಾರವಾಣಿಯಿಂದ ಪ್ರಬೋಧಿಸುತ್ತಿದ್ದರು. ಅಲ್ಲಿ ದೆವ್ವ ಹಿಡಿದ ಒಬ್ಬನಿದ್ದನು. 23ಅವನು, “ನಜರೇತಿನ ಯೇಸುವೇ, ನಿಮಗೇಕೆ ನಮ್ಮ ಗೊಡವೆ? ನೀವು ನಮ್ಮ ವಿನಾಶಕ್ಕಾಗಿ ಬಂದವರೇನು? 24ನೀವು ಯಾರೆಂದು ನನಗೆ ಗೊತ್ತು. ದೇವರಿಂದ ಬಂದ ಪರಮಪೂಜ್ಯರು ನೀವು,” ಎಂದು ಕಿರುಚಿದನು. ಆದರೆ ಯೇಸುಸ್ವಾಮಿ ಅವನನ್ನು ಗದರಿಸಿ, “ಸುಮ್ಮನಿರು, ಇವನನ್ನು ಬಿಟ್ಟು ತೊಲಗು,” ಎಂದು ಆ ದೆವ್ವಕ್ಕೆ ಆಜ್ಞಾಪಿಸಿದರು. 25ದೆವ್ವವು ಆ ಮನುಷ್ಯನನ್ನು ಒದ್ದಾಡಿಸಿ, ಗಟ್ಟಿಯಾಗಿ ಚೀರುತ್ತಾ ಅವನನ್ನು ಬಿಟ್ಟುಹೋಯಿತು. 26ಜನರೆಲ್ಲರೂ ಆಶ್ಚರ್ಯಚಕಿತರಾದರು. 27“ಇದೇನು ಹೊಸ ಬೋಧನೆ!? ಈತ ದೆವ್ವಗಳಿಗೆ ಕೂಡ ಅಧಿಕಾರದಿಂದ ಆಜ್ಞಾಪಿಸುತ್ತಾನೆ; ಅವು ಈತ ಹೇಳಿದ ಹಾಗೆ ಕೇಳುತ್ತವೆಯಲ್ಲ!” ಎಂದು ಪರಸ್ಪರ ಮಾತಾಡಿಕೊಂಡರು.
28ಕೂಡಲೇ ಗಲಿಲೇಯ ಪ್ರಾಂತ್ಯದ ಎಲ್ಲೆಡೆಗೂ ಯೇಸುವಿನ ಸಮಾಚಾರ ಹಬ್ಬಿಹರಡಿತು.
ರೋಗಿಗಳಿಗೆ ಆರೋಗ್ಯದಾನ
(ಮತ್ತಾ. 8:14-17; ಲೂಕ. 4:38-41)
29ಯೇಸುಸ್ವಾಮಿ ಪ್ರಾರ್ಥನಾಮಂದಿರದಿಂದ ಹೊರಟು ಯಕೋಬ ಮತ್ತು ಯೊವಾನ್ನನ ಸಂಗಡ ಸಿಮೋನ ಹಾಗೂ ಅಂದ್ರೆಯನ ಮನೆಗೆ ಹೋದರು. 30ಸಿಮೋನನ ಅತ್ತೆ ಜ್ವರದಿಂದ ಮಲಗಿದ್ದಳು. ಇದನ್ನು ಯೇಸುವಿಗೆ ತಿಳಿಸಿದರು. ಯೇಸು ಆಕೆಯ ಬಳಿಗೆ ಹೋಗಿ ಕೈಹಿಡಿದು ಎಬ್ಬಿಸಿದರು. ಜ್ವರ ಬಿಟ್ಟುಹೋಯಿತು. 31ಆಕೆ ಅವರೆಲ್ಲರನ್ನು ಸತ್ಕರಿಸಿದಳು.
32ಸಂಜೆ ಸೂರ್ಯ ಮುಳುಗಿದ ಮೇಲೆ ಜನರು ರೋಗಿಗಳನ್ನೂ ದೆವ್ವಹಿಡಿದವರನ್ನೂ ಯೇಸುವಿನ ಬಳಿಗೆ ಕರೆತಂದರು. 33ಊರಿಗೆ ಊರೇ ಆ ಮನೆಯ ಬಾಗಿಲಲ್ಲಿ ನೆರೆಯಿತು. 34ನಾನಾ ರೋಗಗಳಿಂದ ನರಳುತ್ತಿದ್ದವರನ್ನು ಯೇಸು ಗುಣಪಡಿಸಿದರು. ದೆವ್ವ ಹಿಡಿದವರಿಂದ ದೆವ್ವ ಬಿಡಿಸಿದರು. ತಾವು ಯಾರೆಂಬುದನ್ನು ದೆವ್ವಗಳು ಅರಿತಿದ್ದುದರಿಂದ ಯೇಸು ಅವುಗಳಿಗೆ ಮಾತನಾಡಲು ಅವಕಾಶಕೊಡಲಿಲ್ಲ.
ಸವಿಸ್ತಾರ ಸೇವೆ
(ಲೂಕ. 4:42-44)
35ಮುಂಜಾನೆ ಬೆಳಕುಹರಿಯುವ ಮುನ್ನ ಯೇಸುಸ್ವಾಮಿ ಎದ್ದು ಏಕಾಂತ ಪ್ರದೇಶಕ್ಕೆ ಹೋಗಿ ಪ್ರಾರ್ಥನೆಮಾಡುತ್ತಿದ್ದರು. 36ಇತ್ತ, ಸಿಮೋನನೂ ಅವನ ಜೊತೆಗಾರರೂ ಯೇಸುವನ್ನು ಹುಡುಕಿಕೊಂಡು ಹೋದರು. ಅವರನ್ನು ಕಂಡಕೂಡಲೇ, “ಎಲ್ಲರು ತಮ್ಮನ್ನೇ ಹುಡುಕುತ್ತಿದ್ದಾರೆ,” ಎಂದು ತಿಳಿಸಿದರು. 37ಅದಕ್ಕೆ ಯೇಸು, “ಅಕ್ಕಪಕ್ಕದ ಊರುಗಳಿಗೆ ಹೋಗೋಣ. 38ಅಲ್ಲೂ ನಾನು ಶುಭಸಂದೇಶವನ್ನು ಸಾರಬೇಕು. ನಾನು ಬಂದಿರುವುದು ಈ ಉದ್ದೇಶಕ್ಕಾಗಿಯೇ,” ಎಂದರು.
39ಅನಂತರ ಯೇಸು ಗಲಿಲೇಯ ಪ್ರಾಂತ್ಯದಲ್ಲೆಲ್ಲಾ ಸಂಚರಿಸಿ ಅಲ್ಲಿನ ಪ್ರಾರ್ಥನಾಮಂದಿರಗಳಲ್ಲಿ ಪ್ರಬೋಧಿಸುತ್ತಾ ದೆವ್ವಗಳನ್ನು ಬಿಡಿಸುತ್ತಾ ಬಂದರು.
ಕುಷ್ಠರೋಗಿಯ ಮೇಲೆ ಕನಿಕರ
(ಮತ್ತಾ. 8:1-4; ಲೂಕ. 5:12-16)
40ಒಮ್ಮೆ ಕುಷ್ಠರೋಗಿಯೊಬ್ಬನು ಯೇಸುಸ್ವಾಮಿಯ ಬಳಿಗೆ ಬಂದು, ಮೊಣಕಾಲೂರಿ, “ತಾವು ಮನಸ್ಸುಮಾಡಿದ್ದಲ್ಲಿ ನನ್ನನ್ನು ಗುಣಮಾಡಬಲ್ಲಿರಿ,” ಎಂದು ದೈನ್ಯದಿಂದ ಬೇಡಿಕೊಂಡನು. ಯೇಸುವಿನ ಮನ ಕರಗಿತು. ಅವರು ಕೈಚಾಚಿ, ಕುಷ್ಠರೋಗಿಯನ್ನು ಮುಟ್ಟಿ, 41“ಖಂಡಿತವಾಗಿ ನನಗೆ ಮನಸ್ಸಿದೆ, ನಿನಗೆ ಗುಣವಾಗಲಿ,” ಎಂದರು. 42ತಕ್ಷಣ ಅವನ ಕುಷ್ಠವು ಮಾಯವಾಯಿತು. ಅವನು ಗುಣಹೊಂದಿದನು.
43-44ಯೇಸು ಅವನಿಗೆ, “ಎಚ್ಚರಿಕೆ! ನೀನು ಗುಣಹೊಂದಿರುವುದನ್ನು ಯಾರಿಗೂ ಹೇಳಕೂಡದು. ಆದರೆ ನೆಟ್ಟಗೆ ಯಾಜಕನ ಬಳಿಗೆ ಹೋಗು; ಅವನು ನಿನ್ನನ್ನು ಪರೀಕ್ಷಿಸಿ ನೋಡಲಿ. ಅನಂತರ ಮೋಶೆ ನಿಯಮಿಸಿರುವ ಶುದ್ಧೀಕರಣ ವಿಧಿಗಳನ್ನು ಅನುಸರಿಸು. ಇದು ಜನರಿಗೆ ಸಾಕ್ಷಿಯಾಗಿರಲಿ,” ಎಂದು ಎಚ್ಚರಿಸಿ ಅವನನ್ನು ಕೂಡಲೇ ಕಳುಹಿಸಿಬಿಟ್ಟರು.
45ಆದರೆ ಅವನು ಹೋಗಿ ಈ ಸಮಾಚಾರವನ್ನು ಎಲ್ಲೆಲ್ಲೂ ಸಾರಿದನು. ಈ ಕಾರಣ ಯೇಸು ಬಹಿರಂಗವಾಗಿ ಯಾವ ಪಟ್ಟಣದೊಳಕ್ಕೂ ಹೋಗಲು ಆಗಲಿಲ್ಲ. ಆದುದರಿಂದ ನಿರ್ಜನ ಪ್ರದೇಶಗಳಲ್ಲೇ ಇರತೊಡಗಿದರು. ಆದರೂ ಜನರು ನಾಲ್ದೆಸೆಗಳಿಂದ ಅವರು ಇದ್ದೆಡೆಗೆ ಬರುತ್ತಲೇ ಇದ್ದರು.

Currently Selected:

ಮಾರ್ಕ 1: KANCLBSI

Highlight

Share

Copy

None

Want to have your highlights saved across all your devices? Sign up or sign in